ಬೇಲೂರು: ಕೂಲಿಗೆ ಹೊರಟಿದ್ದವರ ಬೈಕ್ ಮೇಲೆ ಕಾಡಾನೆ ದಾಳಿ: ಮಹಿಳೆಗೆ ಗಾಯ

ಅರೇಹಳ್ಳಿ, ಮಾರ್ಚ್ 8: ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಚಿಕ್ಕ ಸಾಲಾವರ ಗ್ರಾಮದ ಬಳಿ ಇಂದು ಬೆಳಿಗ್ಗೆ ಕಾಡಾನೆಯ ದಾಳಿಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. 

ಬೆಳಗ್ಗೆ 7:30ರ ಸುಮಾರಿಗೆ, ಉಮೇಶ್ ಮತ್ತು ರೇವತಿ ಬೈಕಿನಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು. ಈ ವೇಳೆ ಕಾಡಾನೆಯೊಂದು ದಾಳಿ ನಡೆಸಿದ್ದು, ರೇವತಿ (50) ಅವರಿಗೆ ತಲೆಗೆ ಮತ್ತು ಸೊಂಟಕ್ಕೆ ಗಂಭೀರ ಗಾಯಗಳಾಗಿವೆ. ಸ್ಥಳೀಯರು ತಕ್ಷಣವೇ ಅವರನ್ನು ಅರೇಹಳ್ಳಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಉಮೇಶ್ ಅವರಿಗೆ ಯಾವುದೇ ಗಾಯವಾಗಿಲ್ಲ. ಘಟನೆ ಸಂಬಂಧ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.