ಪಶ್ಚಿಮಘಟ್ಟಗಳ ರೆಸಾರ್ಟ್ ತೆರವು : ಅರಣ್ಯ ಸಚಿವ ಆದೇಶ

ಬೆಂಗಳೂರು: ರಾಜ್ಯದ 10 ಜಿಲ್ಲೆಗಳಲ್ಲಿ ಆವರಿಸಿರುವ ಪಶ್ಚಿಮಘಟ್ಟ ಸೇರಿದಂತೆ ಎಲ್ಲ ಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಮತ್ತು ಇಲ್ಲಿನ ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ‘ಪಶ್ಚಿಮಘಟ್ಟ ಸೇರಿ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ’ ರಚಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಘೋಷಿಸಿದ್ದಾರೆ.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಈ ಕಾರ್ಯಪಡೆ ರಚಿಸಲಾಗಿದ್ದು, ನಾಳೆಯಿಂದಲೇ ಪಶ್ಚಿಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿನ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಘಟ್ಟ ಪ್ರದೇಶಗಳಲ್ಲಿನ ಅರಣ್ಯದಲ್ಲಿ 2015ರ ನಂತರ ಆಗಿರುವ ಒತ್ತುವರಿಗೆ ಸಂಬಂಧಿಸಿದಂತೆ ಕಾನೂನು ಪ್ರಕ್ರಿಯೆ ಪೂರ್ಣಗೊಂಡಿರುವ ಎಲ್ಲ ಪ್ರಕರಣಗಳಲ್ಲಿ ಇಂದಿನಿಂದಲೇ ತೆರವು ಕಾರ್ಯಾಚರಣೆ ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.