ಕಾಡಾನೆ ದಾಳಿಯಲ್ಲಿ ಮೃತಪಟ್ಟ ಮಹಿಳೆ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ: ಅರಣ್ಯ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ನೀಡುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ವಿಧಾನಪರಿಷತ್ ಕಲಾಪದಲ್ಲಿ ಇಂದು ಈ ಬಗ್ಗೆ ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ವಿಷಯ ಪ್ರಸ್ತಾಪಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಈಶ್ವರ್ ಖಂಡ್ರೆ, ಆನೆ ಮತ್ತು ಮಾನವ ಸಂಘರ್ಷ ಇಂದು, ನಿನ್ನೆಯದಲ್ಲ. ಇದು ಹಲವು ವರ್ಷಗಳಿಂದ ನಡೆಯುತ್ತಿರುವ ಸಂಘರ್ಷ. ಕೋವಿಡ್ ಬಳಿಕ ಹಾಸನದಲ್ಲಿ 4 ರಿಂದ 5 ಜನರು ಆನೆ ದಾಳಿಯಿಂದ ಸಾವನ್ನಪ್ಪಿದ್ದಾರೆ. ನಾವು ಪರಿಹಾರ ಕೊಡಬಹುದೇ ಹೊರತು, ಜೀವ ವಾಪಾಸ್ ತರಲು ಸಾಧ್ಯವಿಲ್ಲ ಎಂದರು.

ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ತಡೆಗೆ ಕ್ರಮ ಕೈಗೊಳ್ಳುತ್ತೇವೆ. ಕೊಡಗು, ಹಾಸನ, ಚಿಕ್ಕಮಗಳೂರಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಹಾಸನದ ಬೇಲೂರಿನಲ್ಲಿ ಕಾಡಾನೆ ದಾಳಿಯಿಂದ ಮೃತರಾದ ಮಹಿಳೆ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.