ಹಾಸನ: ಮಾಜಿ ಸಿಎಂ ಎಸ್.ಎಂ.ಕೃಷ್ಣ (92) ಮುಂಜಾನೆ ಮೂರು ಗಂಟೆ ಸುಮಾರಿನಲ್ಲಿ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ನಿಧನರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಬೆಳಗಿನ ಜಾವ ಅವರು ಕೊನೆ ಉಸಿರೆಳೆದಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿ, ಮಹಾರಾಷ್ಟ್ರ ರಾಜ್ಯಪಾಲ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಅಧಿಕಾರ ಅನುಭವಿಸಿದ್ದ ಅವರು ತಮ್ಮ ಶಿಸ್ತುಬದ್ಧ ಹಾಗೂ ಸಂಯಮದ ನಡವಳಿಕೆಗೆ ಹೆಸರಾಗಿದ್ದರು. ಬೆಂಗಳೂರನ್ನು ಸಿಲಿಕಾನ್ ಸಿಟಿ ಆಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಆರಂಭದಿಂದಲೂ ಕಾಂಗ್ರೆಸ್ ನಲ್ಲಿದ್ದ ಅವರು ಸಕ್ರಿಯ ರಾಜಕಾರಣದಿಂದ ದೂರಸರಿದ ನಂತರ ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಅವರ ಹುಟ್ಟೂರು ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ.