ಹಾಸನ: ಜಿಲ್ಲೆಯ ವಿವಿಧೆಡೆ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಸೋಮವಾರವೂ ಮುಂದುವರಿದ್ದು ಹಲವೆಡೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.
ಸಕಲೇಶಪುರ ಮತ್ತು ಆಲೂರು ತಾಲ್ಲೂಕುಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ರೈತರು ಮತ್ತು ಕಾಫಿ ಬೆಳೆಗಾರರ ಮುಖದಲ್ಲಿ ಸಂತಸದ ಮಂದಹಾಸ ಮೂಡಿದರೆ, ವಾಹನ ಸವಾರರು ಹಾಗೂ ವಿದ್ಯಾರ್ಥಿಗಳು ತೀವ್ರ ತೊಂದರೆ ಎದುರಿಸುವಂತಾಗಿದೆ.
ಬಿಸಿಲಿನ ಬೇಗೆಯಿಂದ ಬೆಂದಿದ್ದ ಭೂಮಿಗೆ ಈ ತಂಪೆರದ ಮಳೆ ಸಮಾಧಾನ ತಂದಿದ್ದು, ಕೃಷಿ ಚಟುವಟಿಕೆಗಳಿಗೆ ಪೂರಕ ವಾತಾವರಣ ಸೃಷ್ಟಿಸಿದೆ.
ಆದರೆ, ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ತುಂಬಿ, ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ವಿದ್ಯಾರ್ಥಿಗಳು ಶಾಲೆಗೆ ತೆರಳಲು ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ವಾಹನ ಸವಾರರು ಸಹ ಸಂಕಷ್ಟದಲ್ಲಿದ್ದಾರೆ.