ಕೆರೆ ಏರಿ ಮೇಲೆ ಬಹಿರ್ದೆಸೆಗೆ ತೆರಳುತ್ತಿದ್ದಾತನ ತಲೆ ಮೇಲೆ ಕಲ್ಲು‌ ಎತ್ತಿ ಹಾಕಿದ ಯುವಕನನ್ನು ಕಂಬಕ್ಕೆ ಕಟ್ಟಿ ಧರ್ಮದೇಟು: ಗಾಂಜಾ ಮತ್ತಿನಲ್ಲಿ‌ಕೃತ್ಯ?

ಹಾಸನ, ಮೇ 04: ಹಾಸನ ನಗರದ ರಿಂಗ್ ರಸ್ತೆಯ ಕೆರೆ ಬಳಿ ಬಹಿರ್ದೆಸೆಗೆಂದು ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ವ್ಯಕ್ತಿಯೊಬ್ಬನ ಮೇಲೆ ಗಾಂಜಾ ನಶೆಯಲ್ಲಿದ್ದ ಯುವಕನೊಬ್ಬ ತಲೆಗೆ ಸಿಮೆಂಟ್ ಕಲ್ಲಿನಿಂದ ಹಲ್ಲೆ ನಡೆಸಿ ದರೋಡೆಗೆ ಯತ್ನಿಸಿದ ಘಟನೆ ನಡೆದಿದೆ.

ಆರೋಪಿಯನ್ನು ಸಾರ್ವಜನಿಕರು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಗೂಸಾ ನೀಡಿ, ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.ಹಲ್ಲೆಗೊಳಗಾದ ವ್ಯಕ್ತಿಯನ್ನು ತಕ್ಷಣವೇ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (HIMS) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೆನ್‌ಷನ್‌ಮೊಹಲ್ಲಾ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಆರೋಪಿಯನ್ನು ರಾಕೇಶ್ ಎಂದು ಗುರುತಿಸಲಾಗಿದ್ದು, ಇವನು ಗಾಂಜಾ ನಶೆಯಲ್ಲಿ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಿದ್ದಾರೆ. ಘಟನೆಯ ಕುರಿತು ಪೆನ್‌ಷನ್‌ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.