ಹಾಸನ: ಆಲೂರು ತಾಲ್ಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ಕಳೆದ ರಾತ್ರಿ ವಕೀಲರೊಬ್ಬರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ.
ವಕೀಲ ದುಷ್ಯಂತ್ (40) ಗಂಭೀರವಾಗಿ ಗಾಯಗೊಂಡಿದ್ದು, ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ದುಷ್ಯಂತ್ ರಂಗೇನಹಳ್ಳಿ ಗ್ರಾಮದ ನಿವಾಸಿಯಾಗಿದ್ದು ವಕೀಲ ವೃತ್ತಿಯ ಜೊತೆಗೆ ಫೈನಾನ್ಸ್ ವ್ಯವಹಾರದಲ್ಲೂ ತೊಡಗಿಸಿಕೊಂಡಿದ್ದರು. ನಿನ್ನೆ ರಾತ್ರಿ KA-46-L-4087 ನಂಬರ್‌ನ ಬೈಕ್‌ನಲ್ಲಿ ರಂಗೇನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭ, ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಸ್ಥಳಕ್ಕೆ ಆಲೂರು ಠಾಣೆಯ ಪೊಲೀಸರು ತಕ್ಷಣವೇ ಭೇಟಿ ನೀಡಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದ್ದು, ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.