ಹಾಸನ: ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇಲೆ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಶನಿವಾರ ಸಂಜೆ ಪ್ರಕರಣ ದಾಖಲಾಗಿದೆ.
ಶನಿವಾರ ಸಂಜೆ ಗ್ರಾಮಾಂತರ ಠಾಣೆಗೆ ಬಂದ ಸಂತ್ರಸ್ತ ಯುವಕ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು ಅವರ ಎದುರು ಹೇಳಿಕೆ ದಾಖಲಿಸಿದ್ದಾರೆ. ಅದರಂತೆ ಡಾ.ಸೂರಜ್ ರೇವಣ್ಣ ವಿರುದ್ಧದ ಭಾರತೀಯ ದಂಡ ಸಂಹಿತೆ ಕಲಂ 377, 342, 506, 34ರ ಅಡಿ ಪ್ರಕರಣ ದಾಖಲಿಸಲಾಗಿದೆ.
‘ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಅವರು ತಮ್ಮ ಗನ್ನಿಗಡದ ಫಾರಂಹೌಸ್‌ಗೆ ಬರಮಾಡಿಕೊಂಡು ನನ್ನ ಮೇಲೆ ಲೈಂಗಿಕ ಸಂಭೋಗ ಹಾಗೂ ದೌರ್ಜನ್ಯ ನಡೆಸಿದ್ದಾರೆ. ಹನುಮನಹಳ್ಳಿ ಗ್ರಾಮದ ಶಿವಕುಮಾರ್ ಮತ್ತು ಸೂರಜ್ ರೇವಣ್ಣ ಅವರಿಂದ ತಮಗೆ ಹಾಗೂ ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ. ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಯುವಕ ಲಿಖಿತ ದೂರು ನೀಡಿದ್ದಾರೆ.
ಈ ಬಗ್ಗೆ ಸಂತ್ರಸ್ತ ಬೆಂಗಳೂರಿಗೆ ತೆರಳಿ ಶುಕ್ರವಾರ ಪೊಲೀಸ್ ಮಹಾನಿರ್ದೇಶಕರು ಹಾಗೂ ಹಾಸನ ಎಸ್ಪಿಗೆ ದೂರು ಸಲ್ಲಿಸಿದ್ದರು. ಅದನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಎಎಸ್ಪಿ ವೆಂಕಟೇಶ್ ನಾಯ್ಡು ಹೇಳಿಕೆ ಪಡೆದರು. ನಂತರ ಪ್ರಕರಣ ದಾಖಲಿಸಲಾಗಿದೆ.