ಬೆಂಗಳೂರು: ಸದಾಶಿವನಗರ ಪೊಲೀಸರು ಗುರುವಾರ (ಮಾರ್ಚ್ 14) ತಡರಾತ್ರಿ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ 2012 ರ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಸೆಕ್ಷನ್ 8 ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಎ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ ಎಂದು ದಿ ಹಿಂದು ವರದಿ ಮಾಡಿದೆ.
ಸಂತ್ರಸ್ತೆಯ ಜತೆಗಿದ್ದ ತಾಯಿ ಗುರುವಾರ ಸಂಜೆ ಪೊಲೀಸರಿಗೆ ದೂರು ನೀಡಿದ್ದು, ಕಳೆದ ಮಧ್ಯರಾತ್ರಿ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಫೆಬ್ರವರಿ 2, 2024 ರಂದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಯ ಸಹಾಯ ಪಡೆಯಲು ತಾಯಿ ಮತ್ತು ಮಗಳು ಹೋದಾಗ ಲೈಂಗಿಕ ದೌರ್ಜನ್ಯದ ಘಟನೆ ಸಂಭವಿಸಿದೆ ಎನ್ನಲಾಗಿದೆ.