ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಹಾಸನ: ಮುಡಾ ಪ್ರಕರಣ ಸಂಬಂಧ ರಾಜ್ಯಪಾಲರ ತನಿಖೆಗೆ ತಡೆ ಕೋರಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ಮಂಗಳವಾರ ಹೈಕೋರ್ಟ್‌ನಲ್ಲಿ ವಜಾಗೊಳ್ಳುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಸುದ್ದಿಗಾರರೊಂದಿಗೆ ಮಾತನಾಡಿ, ಈ ತೀರ್ಪು ರಾಜ್ಯಕ್ಕೆ ಒಂದು ಐತಿಹಾಸಿಕ ತಿರುವಾಗಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿರುವುದು ಜಹಜ್ಜಾಹೀರಾಗಿದೆ. ಸಿಎಂ ಮೇಲೆ ತನಿಖೆಗೆ ಆದೇಶ ನೀಡಲಾಗಿದ್ದರೂ ಈವರೆಗೂ ರಾಜೀನಾಮೆ ನೀಡದಿರುವುದು ಖಂಡನೀಯ ಎಂದರು.

ಮುಡಾ ಹಗರಣದ ವಿರುದ್ಧವಾಗಿ ಬಿಜೆಪಿ ಮೈಸೂರು ಚಲೋ ಬೃಹತ್ ಪಾದಯಾತ್ರೆ ನಡೆಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರ ನೇತೃತ್ವದಲ್ಲಿ ಹೋರಾಟ ಹಮ್ಮಿಕೊಂಡ ಸಂದರ್ಭದಲ್ಲಿ ಮೊದಲ ಹಂತದ ಜಯ ದೊರಕಿದೆ. ಕೋರ್ಟ್ ಇಂದು ಐತಿಹಾಸಿಕ ತೀರ್ಪು ಕೊಟ್ಟಿದೆ.

ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಭಾಗಿಯಾಗಿರುವುದು ಸ್ಪಷ್ಟವಾಗಿ ಕಾಣುತ್ತಿರುವುದರಿಂದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದರು. ತಡೆಯಾಜ್ಞೆಗಾಗಿ ಮನವಿ ಮಾಡಿದ್ದರು. ಸುದೀರ್ಘವಾಗಿ ವಿಚಾರಣೆ ನಡೆಸಿದ ಕೋರ್ಟ್ ಅರ್ಜಿ ವಜಾಗೊಳಿಸಿದೆ. ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೇ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವಾದರೆ ಬಿಜೆಪಿಯಿಂದ ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದರು.

ಮುನ್ನೆಚ್ಚರಿಕೆ ಕ್ರಮವಾಗಿ ಡಿಸಿ ಕಚೇರಿ ಆವರಣದಲ್ಲಿ ಹೆಚ್ಚಿನ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನೇತ್ರಾವತಿ ಮಂಜುನಾಥ್, ಬಿ.ಎಚ್. ನಾರಾಯಣಗೌಡ, ಪ್ರೀತಿವರ್ಧನ್, ಚನ್ನಕೇಶವ, ಪ್ರಸನ್ನಕುಮಾರ್, ರತ್ನಾ ಪ್ರಕಾಶ್, ವೇದಾವತಿ, ಶೇಷಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.