ಹಾಸನ: ನಿನ್ನೆ ಅಪಘಾತದಲ್ಲಿ ಬಲಿಯಾದ ಯುವ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರ ವೈದ್ಯಕೀಯ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಹಾಸನ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಹಿಮ್ಸ್) ಆಸ್ಪತ್ರೆಗೆ ರವಾನಿಸಲಾಯಿತು.
ಅವರು ಮೃತರಾದ ಖಾಸಗಿ ಆಸ್ಪತ್ರೆಯಿಂದ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಮೃತದೇಹವನ್ನು ಸ್ಥಳಾಂತರಿಸಲಾಯಿತು. ಇಂದು ಹಾಸನ ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ.
ಮರಣೋತ್ತರ ಪರೀಕ್ಷೆ ನಂತರ, ಡಿಎಆರ್ ಮೈದಾನದಲ್ಲಿ ಜಿಲ್ಲಾಡಳಿತದಿಂದ ಸರ್ಕಾರಿ ಗೌರವ ಸಲ್ಲಿಸಲಾಗುವುದು. ನಂತರ, ಮೃತದೇಹವನ್ನು ಹರ್ಷಬರ್ಧನ್ ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಅಧಿಕಾರಿ ಹರ್ಷಬರ್ಧನ್ ಅವರ ಕುಟುಂಬ ಮಧ್ಯಪ್ರದೇಶದಿಂದ ಹಾಸನಕ್ಕೆ ಆಗಮಿಸುತ್ತಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.