ಹಾಸನ, ಮಾರ್ಚ್ 14: ಬೇಲೂರು ತಾಲೂಕಿನಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟ ಘಟನೆಗೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಚೀಕನಹಳ್ಳಿ-ಬೇಲೂರು ರಸ್ತೆಯನ್ನು ತಡೆದು, ಪ್ರತಿಭಟನೆಯಲ್ಲಿ ತೊಡಗಿದ್ದಾರೆ.
ಮೃತ ಮಹಿಳೆಯ ಕುಟುಂಬಸ್ಥರು ಹಾಗೂ ಗ್ರಾಮಸ್ಥರು, ಟೈರ್‌ಗೆ ಬೆಂಕಿ ಹಚ್ಚಿ ಧರಣಿ ಆರಂಭಿಸಿದ್ದಾರೆ.ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವ ಪ್ರತಿಭಟನಾಕಾರರು ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದ ಕಾಡಾನೆ ಹಾವಳಿ ತೀವ್ರವಾಗಿ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅರಣ್ಯ ಸಚಿವರು ಸ್ಥಳಕ್ಕೆ ಆಗಮಿಸಬೇಕು:
ಪ್ರತಿಭಟನಾಕಾರರು, ಅರಣ್ಯ ಸಚಿವರು ಸ್ವತಃ ಸ್ಥಳಕ್ಕೆ ಬಂದು ಸಮಸ್ಯೆಗೆ ಸ್ಪಷ್ಟ ಪರಿಹಾರ ನೀಡುವವರೆಗೆ ಮೃತದೇಹವನ್ನು ಮೇಲೆತ್ತಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು, ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಾಸ ಪಡುವ ಸ್ಥಿತಿ ನಿರ್ಮಾಣವಾಗಿದೆ.